150ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಭಸ್ಮ :ವಾರಣಾಸಿ ರೈಲು ನಿಲ್ದಾಣದಲ್ಲಿ ಅಗ್ನಿ ಅವಘಡ
ರೈಲು ನಿಲ್ದಾಣದ ವಾಹನ ನಿಲ್ದಾಣದ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 150ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ವಾರಣಾಸಿ ರೈಲ್ವೆ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ಪಡೆದು ಘಟನಾ ಸ್ಥಳಕ್ಕೆ ಧಾವಿಸಿದ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್), ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ತಂಡ ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯ ಬಗ್ಗೆ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಲಾಲ್ಟಿ ಚೌಧರಿ ವಿಷಾದ ವ್ಯಕ್ತಪಡಿಸಿದ್ದಾರೆ. ರೈಲ್ವೆ ನೌಕರರಿಗಾಗಿ ಪಾರ್ಕಿಂಗ್ ಸ್ಟ್ಯಾಂಡ್ (ವಾಹನ ನಿಲುಗಡೆ) ನಿರ್ಮಿಸಲಾಗಿತ್ತು. ಅಗ್ನಿ ಅವಘಡದಿಂದ ಸಾಕಷ್ಟು ಹಾನಿಯಾಗಿದೆ ಎಂದು ಹೇಳಿದ್ದಾರೆ.
ಈ ದುರ್ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.