ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ ಹಾಗೂ ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜೆಡಿಎಸ್ ಹಾಗೂ ಬಿಜೆಪಿಯ ಪಾದಯಾತ್ರೆಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಬೃಹತ್ ಜನಾಂದೋಲನವನ್ನು ಮಾಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಸುಳ್ಳುಆರೋಪಗಳನ್ನು ಆಧರಿಸಿ ಮಾಡುತ್ತಿರುವ ಪಾದಯಾತ್ರೆ ಮಾಡುತ್ತಿದ್ದು, ಸಿದ್ದರಾಮಯ್ಯನಿಗೆ ಕಪ್ಪು ಬಳಿಯಲು ಪ್ರಯತ್ನಿಸುತ್ತಿದ್ದಾರೆ. ಅವರ ಆರೋಪಗಳು ಸುಳ್ಳು ಎಂದು ಜನರಿಗೆ ಮನವರಿಕೆ ಮಾಡಲು ಜನಾಂದೋಲನ ಮಾಡಲಾಗಿದೆ ಎಂದರು.
ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ಹೂಡಿದ್ದಾರೆ. ಸುಳ್ಳು ಆರೋಪಗಳಿಂದ ನನ್ನ ಮೇಲೆ ಕಪ್ಪು ಬಳಿದರೆ, ರಾಜಕೀಯವಾಗಿ ನನ್ನನ್ನು ಮಣಿಸಿ ಲಾಭ ಪಡೆಯಬಹುದು ಎಂಬ ಭ್ರಮೆಯಲ್ಲಿದ್ದಾರೆ. ಬಿಜೆಪಿ ಜೆಡಿಎಸ್ ನವರ ಹಗರಣಗಳು ಬೇಕಾದಷ್ಟಿದ್ದು ಅವುಗಳನ್ನು ಬಯಲಿಗೆಳೆಯುತ್ತೇವೆ. ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಯಡಿಯೂರಪ್ಪ ಸೇರಿದಂತೆ ಹಲವರ ಮೇಲೆ ಇರುವ ಹಗರಣಗಳ ವಿರುದ್ಧ ತನಿಖೆ ಕೈಗೊಳ್ಳಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.