ಸಂಡೂರು ವಿಧಾನಸಭಾ ಕ್ಷೇತ್ರದ ಬನ್ನಿಹಟ್ಟಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಗೆಲುವಿನ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ. ನಾನು ಬಳ್ಳಾರಿಗೆ ಬಂದಾಗ ರೆಡ್ಡಿ ಬ್ರದರ್ಸ್ ಮತ್ತು ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೆ ಅವಮಾನ ಮಾಡಿದ್ರು.
ದೇವಸ್ಥಾನದ ಬಾಗಿಲಲ್ಲಿ ಒಬ್ನೇ ನಿಂತು ಭಾಷಣ ಮಾಡಿ ಹೋಗಿದ್ದೆ. ಒಂದು ಮನೆಗೆ ಹೋಗಿ ಕುಡಿಯೋಕೆ ನೀರು ಕೇಳಿದ್ರೂ ನನಗೆ ನೀರು ಕೊಡೋಕೂ ಜನ ಭಯ ಬೀಳ್ತಿದ್ರು ಎಂದು ರೆಡ್ಡಿ ದರ್ಬಾರ್ ಅವಧಿಯ ಘಟನೆಗಳನ್ನು ಉಲ್ಲೇಖಿಸಿದ ಸಿದ್ದರಾಮಯ್ಯ ಅವರು ದಬ್ಬಾಳಿಕೆ, ದೌರ್ಜನ್ಯದ ಆ ದಿನಗಳನ್ನು ನೆನಪಿಸಿದರು.
ಅಕ್ರಮ ಗಣಿಗಾರಿಕೆ ವಿರುದ್ಧ, ರೆಡ್ಡಿ ಬ್ರದರ್ಸ್ ಬಳ್ಳಾರಿಯನ್ನು ಹಾಳು ಮಾಡಲು ಬಿಡಬಾರದು ಎಂದು ನಾನು ಬೆಂಗಳೂರಿನಿಂದ ಪಾದಯಾತ್ರೆ ಮಾಡಿದೆ. ಬಳ್ಳಾರಿ ಜನರನ್ನು ಭಯಮುಕ್ತಗೊಳಿಸಿದ್ದು ಕಾಂಗ್ರೆಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಜಿಂದಾಲ್ ಗೆ ಕಾಲಿಟ್ಟರೂ ಜಿಲ್ಲಾ ಮಟ್ಟದ ಅಧಿಕಾರಿಗಳೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಾಣಲು ಬರಲಿಲ್ಲ. ಆ ಮಟ್ಟದಲ್ಲಿ ಅಧಿಕಾರಿಗಳಲ್ಲಿ ಭಯ, ಭೀತಿ ಸೃಷ್ಟಿ ಮಾಡಿದ್ದರು.
ನಾನು ಇಬ್ರಾಹಿಂ ಚುನಾವಣಾ ಪ್ರಚಾರಕ್ಕೆ ಬಂದರೆ ಕಾರ್ಯಕ್ರಮ ಮಾಡಲು, ನನಗೆ ಭಾಷಣ ಮಾಡಲು ಜಾಗ ಕೊಡಲಿಲ್ಲ. ದೇವಸ್ಥಾನದ ಬಾಗಿಲಲ್ಲಿ ನಾನು ಭಾಷಣ ಮಾಡಿ ಹೋದೆ. ಮತ್ತೆ ಏನಾದರೂ ಜನಾರ್ಧನ ರೆಡ್ಡಿ ಪಟಾಲಂ ಬಳ್ಳಾರಿಯಲ್ಲಿ ಬೆಳೆದರೆ ಮತ್ತೆ ಅದೇ ಭೀತಿ, ಭಯದಲ್ಲಿ ಬಳ್ಳಾರಿ ನರಳಬೇಕಾಗುತ್ತದೆ. ಆದ್ದರಿಂದ ಇದಕ್ಕೆ ಅವಕಾಶ ಕೊಡಬೇಡಿ. ಬಿಜೆಪಿಯನ್ನು ಸೋಲಿಸಿ ಬಳ್ಳಾರಿಯನ್ನು ಉಳಿಸಿ ಎಂದು ಕರೆ ನೀಡಿದರು.