ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದರು.
ರಾಜ್ಯದಲ್ಲಿ ಬೆಳಗಾವಿ – ಹುನಗುಂದ- ರಾಯಚೂರು (NH748A), ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿ, ಸೂರತ್ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿಗಳು ಇನ್ನಷ್ಟು ಪ್ರಮುಖ ವಿಚಾರಗಳ ಕುರಿತು ಕೇಂದ್ರ ಸಚಿವರ ಗಮನ ಸೆಳೆದರು. ರಾಜ್ಯದಲ್ಲಿ 5225ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.