ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ : ಡಿ.ಕೆ. ಶಿವಕುಮಾರ್
ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ, ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಖಡಕ್ಕಾಗಿ ತಿಳಿಸಿದರು.
“ಸಿದ್ದರಾಮಯ್ಯ ಅವರು ನಮ್ಮ ಮುಖ್ಯಮಂತ್ರಿಗಳು, ಅವರು ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ. ನಮ್ಮ ಮುಖ್ಯಮಂತ್ರಿಗಳು ಈ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಅವರು ನಮ್ಮ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿದ್ದು, ನಾವು ಒಟ್ಟಾಗಿ ರಾಜ್ಯದ ಜನರ ಸೇವೆ ಮುಂದುವರಿಸುತ್ತೇವೆ. ಕೇವಲ ಕಾಂಗ್ರೆಸ್ ಪಕ್ಷ ಮಾತ್ರವಲ್ಲ ಇಡೀ ಇಂಡಿಯಾ ಒಕ್ಕೂಟ ನಮ್ಮ ಮುಖ್ಯಮಂತ್ರಿಗಳ ಬೆನ್ನಿಗೆ ನಿಲ್ಲಲಿದೆ. ಮುಖ್ಯಮಂತ್ರಿಗಳ ವಿರುದ್ಧ ಸುಳ್ಳು ಪ್ರಕರಣ ಸೃಷ್ಟಿಸಲಾಗಿದೆ. ಹೀಗಾಗಿ ಕಾನೂನು ಚೌಕಟ್ಟಿನಲ್ಲಿ ಹೋರಾಟ ಮುಂದುವರಿಸುತ್ತೇವೆ. ಇದರ ಜತೆಗೆ ರಾಜಕೀಯವಾಗಿಯೂ ಜನರ ಮಧ್ಯೆ ಹೋರಾಟ ಮಾಡಲಾಗುವುದು” ಎಂದು ತಿಳಿಸಿದರು.
“ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ಕಚೇರಿಯಾಗಿ ಪರಿವರ್ತನೆ ಮಾಡಿಕೊಳ್ಳಲು ನಡೆಯುತ್ತಿರುವ ಹುನ್ನಾರದ ವಿರುದ್ಧ ಹೋರಾಟ ಮಾಡುತ್ತೇವೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆ ಮಾಡಬೇಕಿದೆ. ಮುಖ್ಯಮಂತ್ರಿಗಳ ವಿರುದ್ಧ ಕಾನೂನು ಬಾಹಿರವಾಗಿ ವಿಚಾರಣೆಗೆ ಅನುಮತಿ ನೀಡಲಾಗಿದೆ. ನಾವು ಕಾನೂನು ಗೌರವಿಸುತ್ತೇವೆ. ದೇಶದ ಕಾನೂನು ನಮಗೆ ರಕ್ಷಣೆ ನೀಡಲಿದೆ ಎಂಬ ವಿಶ್ವಾಸವಿದೆ. ನ್ಯಾಯ ಪೀಠದಿಂದ ಅನ್ಯಾಯ ಆಗುವುದಿಲ್ಲ ಎಂಬ ನಂಬಿಕೆ ಇದೆ. ಹೀಗಾಗಿ ಕಾನೂನು ಸಮರಕ್ಕೆ ನಾವು ಸಜ್ಜಾಗಿದ್ದೇವೆ” ಎಂದು ತಿಳಿಸಿದರು.