ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ರಂಗೇರಿದೆ. ಅದರಲ್ಲೂ ತೀವ್ರ ಕುತೂಹಲ ಮೂಡಿಸಿದ್ದ ಎನ್‌ಡಿಎ ಅಭ್ಯರ್ಥಿ ಕೊನೆಗೂ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆಗೆ ನಾಳೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಸರು ಪ್ರಕಟವಾಗಿದ್ದು, ಅಳೆದು ತೂಗಿ ಕೊನೆ ಕ್ಷಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಮಣೆಹಾಕಲಾಗಿದೆ.
ಬಿಎಸ್ ಯಡಿಯೂರಪ್ಪ ನಿವಾಸದಲ್ಲಿಂದು ನಡೆದ ಜೆಡಿಎಸ್-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ನಿಖಿಲ್ ಹೆಸರು ಘೋಷಣೆ ಮಾಡಲಾಯಿತು. ಸ್ವತಃ ಯಡಿಯೂರಪ್ಪ ಅವರೇ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದರು.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ನಿಖಿಲ್ ಸ್ಪರ್ಧೆಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಬಳಿಕ ಯಡಿಯೂರಪ್ಪ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಮನ್ವಯ ಸಭೆ ನಡೆಸಿ ನಂತರ ನಿಖಿಲ್ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು. ಇದೀಗ ಚನ್ನಪಟ್ಟಣ ಎನ್‌ಡಿಎ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಿದೆ.