ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ…
ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಇಂಡಿಯಾ ಬ್ಲಾಕ್‌ನ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ಬಗ್ಗೆ ಚರ್ಚೆ ನಡೆಸಲಾಯಿತು. ಇಂಡಿಯಾ ಬ್ಲಾಕ್ ಸಭೆಯ ನಂತರ ಮಾಹಿತಿ ನೀಡಿದ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಂಸದ ಕೆ.ಸಿ. ವೇಣುಗೋಪಾಲ್, ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸದನದ ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಭಾರತ್ ಜೋಡೋ ಯಾತ್ರೆ ಹಾಗೂ ನ್ಯಾಯ್ ಯಾತ್ರೆ ಮೂಲಕ ದೇಶಾದ್ಯಂತ ಸಂಚರಿಸಿ ಕಾಂಗ್ರೆಸ್ ಪಕ್ಷಕ್ಕೆ ಬಲ ತುಂಬಿದ್ದರು. ಈ ಹಿನ್ನೆಲೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅತ್ಯುತ್ತಮ ಸಾಧನೆ ಮಾಡಿದೆ. ಕಾಂಗ್ರೆಸ್ 99 ಸೀಟು ಗೆದ್ದು ಹೆಚ್ಚಿನ ಸ್ಥಾನ ಗಳಿಸಿದೆ. ಹೀಗಾಗಿ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯೇ ಆಗಬೇಕೆಂದು ಕಾಂಗ್ರೆಸ್ ನಾಯಕರು ಆಗ್ರಹ ಮಾಡಿದ್ದರು. ಆದರೆ ರಾಹುಲ್ ಗಾಂಧಿ ಕಡೆಯಿಂದ ಯಾವುದೇ ಅಂತಿಮ ತೀರ್ಮಾನ ಬಂದಿರಲಿಲ್ಲ. ಈಗ ರಾಹುಲ್ ಗಾಂಧಿ ವಿಪಕ್ಷ ನಾಯಕನ ಸ್ಥಾನವನ್ನು ಒಪ್ಪಿಕೊಂಡಿದ್ದಾರೆ.