ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಆಯ್ಕೆ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಮಹಿಳಾ ಘಟಕದ ಅಧ್ಯಕ್ಷರಾಗಿ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಅವರನ್ನು ನೇಮಿಸಲಾಗಿದೆ. ಸೌಮ್ಯಾ ರೆಡ್ಡಿ ಅವರ ನೇಮಕದ ಪ್ರಸ್ತಾವಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದನೆ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.
ಸೌಮ್ಯ ರೆಡ್ಡಿ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾ ಅವರು ರಾಜ್ಯದಲ್ಲಿ ಅಭ್ಯರ್ಥಿಯನ್ನು ಹುಡುಕುವ ಪ್ರಕ್ರಿಯೆ ಆರಂಭಿಸಿದ್ದರು. ಚರ್ಚೆಯ ವೇಳೆ ಕೃಪಾ ಅಮರ್ ಆಳ್ವ, ಕಮಲಾಕ್ಷಿ ರಾಜಣ್ಣ, ಐಶ್ವರ್ಯ ಮಹದೇವ್, ನಯನಾ ಮೋಟಮ್ಮ, ವೀಣಾ ಕಾಶಪ್ಪನವರ್ ಮತ್ತು ಕವಿತಾ ರೆಡ್ಡಿ ಹೆಸರು ಕೇಳಿಬಂದಿತ್ತು. ಅಂತಿಮವಾಗಿ ಹೈಕಮಾಂಡ್ ಸೌಮ್ಯ ರೆಡ್ಡಿಗೆ ಮಣೆ ಹಾಕಿದೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ಚುನಾಯಿತರಾಗಿದ್ದ ಸೌಮ್ಯಾ ರೆಡ್ಡಿ, 2023ರ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಅಲ್ಲದೆ, ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿ ಸೂರ್ಯ ವಿರುದ್ಧ ಕಣಕ್ಕಿಳಿದಿದ್ದ ಅವರು ಪರಾಭವ ಹೊಂದಿದ್ದರು.