ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿನ 443.64 ಕೋಟಿಯ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಫಲಾನುಭವಿಗಳಿಗೆ ಕೃಷಿ ಸಲಕರಣೆಗಳನ್ನು ವಿತರಿಸಿದ ಬಳಿಕ ವಾಲ್ಮೀಕಿ ಜಯಂತಿ ಪ್ರಯುಕ್ತ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ನಾವು ಈಗಾಗಲೇ ಸರ್ಕಾರದ ವತಿಯಿಂದ ವಾಲ್ಮೀಕಿ ಜಯಂತಿ ಆಚರಿಸುತ್ತಿದ್ದು ರಾಜ್ಯ ಮಟ್ಟದ ವಾಲ್ಮೀಕಿ ಪ್ರಶಸ್ತಿಯನ್ನೂ ನೀಡುತ್ತಿದ್ದೇವೆ. ವಾಲ್ಮೀಕಿಯವರು ಸಂಸ್ಕೃತದಲ್ಲಿ 20 ಸಾವಿರ ಶ್ಲೋಕಗಳನ್ನು ರಚಿಸಿದ್ದಾರೆ. ಶೂದ್ರ ವರ್ಗದ ಜನ ವಿದ್ಯೆ ಕಲಿಯುವುದೇ ನಿಷಿದ್ಧವಾಗಿದ್ದ ಕಾಲದಲ್ಲಿ ವಿದ್ಯೆ ಕಲಿತು, ಸಂಸ್ಕೃತವನ್ನೂ ಕಲಿತು ರಾಮಾಯಣ ರಚಿಸಿದ್ದು ಬಹಳ ದೊಡ್ಡ ಹೋರಾಟ ಮತ್ತು ಸಾಧನೆ ಎಂದರು.
ಹೆಚ್.ಡಿ.ಕೋಟೆಯಲ್ಲಿ 443 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟಿಸಿದ್ದೇನೆ. ಶಂಕುಸ್ಥಾಪನೆಯನ್ನೂ ನೆರವೇರಿಸಿದ್ದಾರೆ. ರಾಜ್ಯ ಸರ್ಕಾರದ ಬಳಿ ಸಂಬಳ ಕೊಡಲು, ಅಭಿವೃದ್ಧಿಗೆ ಹಣ ಇಲ್ಲ ಬಿಜೆಪಿಯವರು ಹಸಿ ಸುಳ್ಳು ಹರಡಿಸುತ್ತಾರೆ. ನಮ್ಮಲ್ಲಿ ಹಣ ಇಲ್ಲದಿದ್ದರೆ ಈ 443 ಕೋಟಿ ಎಲ್ಲಿಂದ ಬಂತು? ಯಾವುದಾದರೂ ರಾಜ್ಯ ಸರ್ಕಾರಿ ನೌಕರರಿಗೆ ಸಂಬಳ ನಿಂತಿದೆಯಾ? ಎಂದು ಪ್ರಶ್ನಿಸಿದರು.
ರಾಜ್ಯದ ಕೋಟಿ ಕೋಟಿ ಫಲಾನುಭವಿಗಳು ನಮ್ಮ ಐದೂ ಗ್ಯಾರಂಟಿ ಯೋಜನೆಗಳ ಫಲವನ್ನು ಪ್ರತೀ ತಿಂಗಳೂ ಪಡೆಯುತ್ತಿದ್ದಾರೆ. ಆದರೂ ಬಿಜೆಪಿಯವರು ಗ್ಯಾರಂಟಿ ಯೋಜನೆಗಳಿಗೂ ಹಣ ಇಲ್ಲ ಎಂದು ಸುಳ್ಳು ಹರಡಿಸುತ್ತಿದ್ದಾರೆ. ಸುಳ್ಳೇ ಬಿಜೆಪಿಯ ಮನೆ ದೇವರು ಎಂದರು.